ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜ್ಞಾನದ ಜೊತೆಗೆ ಸೃಜನಶೀಲತೆ, ಸ್ಪರ್ಧಾತ್ಮಕ ಮನೋಭಾವ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಅಂತರ್ಕಾಲೇಜು ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ‘ನವೋನ್ಮೇಶ್’ ಇಂದು ಕುಂದಾಪುರದ ಮೂಡ್ಲಕಟ್ಟೆಯ ಐಎಂಜೆ ಕ್ಯಾಂಪಸ್ನಲ್ಲಿ ನಡೆಯಿತು. ರಾಜ್ಯದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 2,000ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಬೆಳೆಗ್ಗೆ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನಟ ರೂಪೇಶ್ ಶೆಟ್ಟಿ ಗೌರವ ಅತಿಥಿಯಾಗಿ ಪಾಲ್ಗೊಂಡರು. ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕಾದ ಸಿದ್ಧಾರ್ಥ ಜೆ. ಶೆಟ್ಟಿ. ಸಂಸ್ಥೆಯ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಸ್ಪರ್ಧೆಗಳೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡ ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಜ್ಞಾನ, ಕೌಶಲ, ಸೃಜನಶೀಲತೆ ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಸೇರಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಹಾಗೂ ಹೊಸ ಅನುಭವಗಳನ್ನು ಪಡೆಯಲು ಉತ್ಸವ ಸಹಕಾರಿಯಾಯಿತು.

ಶಿಕ್ಷಣದೊಂದಿಗೆ ಪ್ರತಿಭೆಗೂ ಆದ್ಯತೆ
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ, ಐಎಂ ಜಯರಾಮ್ ಶೆಟ್ಟಿಯವರಿಂದ 2004ರಲ್ಲಿ ಆರಂಭಗೊಂಡ ಎಂಐಟಿ ಶಿಕ್ಷಣ ಸಂಸ್ಥೆ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಬೆಳೆದಿದ್ದು, ಸಂಸ್ಥೆಯ ಮೂಲಸೌಕರ್ಯ ಹಾಗೂ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ ಎಂದು ತಿಳಿಸಿದರು.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವಿ ಕೋರ್ಸ್ಗಳು, ಎಂಬಿಎ, ಎಂಸಿಎ, ಫಿಸಿಯೋಥೆರಪಿ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ನಂತಹ ವಿವಿಧ ಕೋರ್ಸ್ಗಳನ್ನು ಸಂಸ್ಥೆಯಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸುಸಜ್ಜಿತ ಮೂಲಸೌಕರ್ಯ, ತರಗತಿ ಕೊಠಡಿಗಳು ಹಾಗೂ ಉತ್ತಮ ಕಲಿಕಾ ವಾತಾವರಣವನ್ನು ರೂಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಮೇಲೆ ಹೆಚ್ಚಿನ ಗಮನ ಹರಿಸಲು ಅನುಕೂಲವಾಗಿದೆ ಎಂದು ಹೇಳಿದರು.
ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆದು ತಮ್ಮ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದಾರೆ. ಶಿಕ್ಷಣದ ಗುಣಮಟ್ಟದೊಂದಿಗೆ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳತ್ತ ಸಾಗಲು ಅಗತ್ಯವಾದ ಮಾರ್ಗದರ್ಶನ ಮತ್ತು ಅವಕಾಶಗಳನ್ನು ಕಲ್ಪಿಸುವುದಕ್ಕೂ ಸಂಸ್ಥೆ ಆದ್ಯತೆ ನೀಡುತ್ತಿದೆ ಎಂದು ಅವರು ವಿವರಿಸಿದರು.
ಕಳೆದ ಮೂರು ವರ್ಷಗಳಿಂದ ಉತ್ಸವ ಆಯೋಜನೆ
ವಿದ್ಯಾರ್ಥಿಗಳ ಬೆಳವಣಿಗೆ ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗಬಾರದು. ಪಠ್ಯ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಇತರ ಸೃಜನಶೀಲ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಅವಕಾಶ ದೊರೆಯಬೇಕು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಮತ್ತು ಅದನ್ನು ಬೆಳೆಸಲು ನೆರವಾಗುತ್ತವೆ ಎಂದು ಪ್ರಾಂಶುಪಾಲರು ಅಭಿಪ್ರಾಯಪಟ್ಟರು.
ಈ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ‘ನವೋನ್ಮೇಶ್’ ಉತ್ಸವವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ರಾಜ್ಯದ ವಿವಿಧ ಕಾಲೇಜುಗಳಿಂದ 2,000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಕಾರ್ಯಕ್ರಮದ ವ್ಯಾಪ್ತಿ ಮತ್ತು ವಿದ್ಯಾರ್ಥಿಗಳ ಆಸಕ್ತಿಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು, ಇತರರ ಸಾಮರ್ಥ್ಯವನ್ನು ಅರಿತುಕೊಳ್ಳಲು ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಈ ಉತ್ಸವ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಉತ್ಸವದಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.
ವಿಜೇತರಿಗೆ ಬಹುಮಾನ ವಿತರಣೆ
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಟ ವಜ್ರಂಗ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಹೇಮಲತಾ ಸ್ವಾಗತ ಭಾಷಣ ಮಾಡಿದರು. ಡಾ. ಪ್ರತಿಭಾ ಎಂ. ಪಟೇಲ್ ಸೇರಿದಂತೆ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಪ್ರಯತ್ನ ನಡೆಯಿತು.

