ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ಕಾರ್ಯಕ್ರಮವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಅಜ್ಜರಕಾಡು ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ನೆರವು ನೀಡಲಾಗುವುದು ಎಂದರು. ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿ ದಾಮೋದರ್ ಶರ್ಮ ಬಾರ್ಕೂರು ಅವರು ಬೆಳಿಗ್ಗೆ 9.30ರಿಂದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
1980ರಲ್ಲಿ ಕೇವಲ 306 ಸದಸ್ಯರು, ರೂ.6,200 ಪಾಲು ಬಂಡವಾಳ ಹಾಗೂ ರೂ.4,664 ಠೇವಣಿಯೊಂದಿಗೆ ಆರಂಭಗೊಂಡ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಸ್ತುತ 23 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ಸಂಘವು ರೂ.685 ಕೋಟಿ ಠೇವಣಿ, ರೂ.537 ಕೋಟಿ ಸಾಲ ವಿತರಣೆ ಹಾಗೂ 2025-26ನೇ ಸಾಲಿನಲ್ಲಿ ರೂ.4,060 ಕೋಟಿ ವಾರ್ಷಿಕ ವಹಿವಾಟು ನಡೆಸಿ ರೂ.19 ಕೋಟಿಗೂ ಅಧಿಕ ಲಾಭ ಗಳಿಸಿದೆ.
12 ಶಾಖೆಗಳ ಮೂಲಕ ಗ್ರಾಹಕ ಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವ ಸಂಘವು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು, ಪ್ರತಿವರ್ಷ ಸುಮಾರು ರೂ.25 ಲಕ್ಷಕ್ಕೂ ಅಧಿಕ ಮೊತ್ತವನ್ನು ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ. ಪೊಲೀಸ್ ಠಾಣೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಕಂಪ್ಯೂಟರ್ ಕೊಡುಗೆ, ಧಾರ್ಮಿಕ ಕೇಂದ್ರಗಳಿಗೆ ವಾಟರ್ ಚಿಲ್ಲರ್ ಮತ್ತು ಕುರ್ಚಿಗಳ ವಿತರಣೆ, ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ನೃತ್ಯ ಸ್ಪರ್ಧೆಗಳು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.


