ಉಜಿರೆ, ಜುಲೈ 07: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಇಂದಿನ ಯುವಜನತೆ ಉದ್ಯೋಗ ಅರಸುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಉದ್ಯಮಶೀಲತೆಯು ಆತ್ಮನಿರ್ಭರತೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಸಾಧನವಾಗಿದ್ದು, ತರಬೇತಿಯ ಮೂಲಕ ದೊರೆಯುವ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಬಸವರಾಜ್ ಅವರು ಮಾತನಾಡಿ, ಯಶಸ್ವಿ ಉದ್ಯಮಿಯಾಗಲು ಶಿಸ್ತು, ಯೋಜನೆ, ನವೀನ ಚಿಂತನೆ ಮತ್ತು ನಿರಂತರ ಕಲಿಕೆ ಅಗತ್ಯವೆಂದು ತಿಳಿಸಿದರು. ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಅವರು ವಂದನಾರ್ಪಣೆ ಸಲ್ಲಿಸಿದರು.
ತರಬೇತಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

