×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ : ನಾರಾಯಣ ಗುರು ಜಯಂತಿ ಉಡುಪಿಯಲ್ಲಿ ಸಾಮರಸ್ಯ ಜಾಥಾ, ರಾಜ್ಯ ಮಟ್ಟದ ಭಾಷಣ ಸ್ಪರ್ಧ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀನಾರಾಯಣ ಗುರುಗಳ 172ನೇ ಜನ್ಮಜಯಂತಿ ಪ್ರಯುಕ್ತ ಗುರುಗಳ ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಸಭಾ ಕಾರ್ಯಕ್ರಮ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮವನ್ನು ಶ್ರೀನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಾತಿ-ಧರ್ಮದ ವೈಷಮ್ಯಗಳನ್ನು ಮರೆತು ಕೋಮು ಸಾಮರಸ್ಯದಿಂದ ಎಲ್ಲರೂ ಒಗ್ಗಟ್ಟಿನಿಂದ ಬದುಕಿದಾಗ ಮಾತ್ರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದರು.

ಕರಾವಳಿಯಲ್ಲಿ ಉದ್ಯಮ, ಕೈಗಾರಿಕೆ, ಐಟಿ-ಬಿಟಿ ಹಾಗೂ ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಮಾಜದಲ್ಲಿ ಸಾಮರಸ್ಯ ಹಾಗೂ ಒಗ್ಗಟ್ಟು ಅಗತ್ಯವಾಗಿದೆ. ನಾರಾಯಣ ಗುರುಗಳ ತತ್ವಾದರ್ಶಗಳನ್ನು ಯುವ ಮನಸ್ಸುಗಳು ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೇರೇಪಿಸುವ ಕೆಲಸ ನಡೆಯಬೇಕು ಎಂದು ಅವರು ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಶ್ರೀನಾರಾಯಣ ಗುರುಗಳ ಜನ್ಮದಿನಾಚರಣೆಯಂತಹ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕರಾವಳಿಯ ಎಲ್ಲಾ ಶಾಸಕರು ಮಾಜಿ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರನ್ನು ಭೇಟಿಯಾಗಿ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ನಮ್ಮ ನಡುವಿನ ಕಂದಕಗಳನ್ನು ತೊರೆದು ಸಾಮರಸ್ಯದಿಂದ ಬದುಕುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ವಹಿಸಿದ್ದರು

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್, ಶಿವಸಾಗರ್ ಗ್ರೂಪ್ ಆಫ್‌ನ ಆಡಳಿತ ನಿರ್ದೇಶಕ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ಡೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಶ್ರೀಬ್ರಹ್ಮಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ ಬಬ್ಬುಸ್ವಾಮಿ ದೈವಸ್ಥಾನ ಮಣಿಪಾಲ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ, ಬಿಲ್ಲವ ಸೇವಾ ಸಂಘ ಸಂತೆಕಟ್ಟೆ ಗೌರವಾಧ್ಯಕ್ಷ ಭಾಸ್ಕ‌ರ್ ಜತ್ತನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್‌ ಹಾಗೂ ಬಿಲ್ಲವ ಮಹಾಮಂಡಳ ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತರಿದ್ದರು. ಸುನೀಲ್ ಕುಮಾರ್ ಮಲ್ಪೆ ವಂದಿಸಿದರು. ತೇಜಸ್‌ ಜೆ. ಬಂಗೇರ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *