
ಉಡುಪಿ : ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.17ರಂದು ಶನಿವಾರ ರಾಜ್ಯವ್ಯಾಪಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್ ಒಕ್ಕೂಟದಿಂದ ಶಾಲಾ, ಕಾಲೇಜ್‌ಗಳನ್ನು ಬಂದ್ ಆಚರಿಸಲಾಗುವುದೆಂದು ಎನ್ಎಸ್‌ಯುಐನ ಜಿಲ್ಲಾಧ್ಯಕ್ಷ ಸೌರಬ್ ಬಳ್ಳಾಲ್ ನಗರದಲ್ಲಿ ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತದ ಬಿಜೆಪಿ ಸರ್ಕಾರವು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿದ್ದ ಸೈಕಲ್ ವಿತರಣೆ ನಿಲ್ಲಿಸಲಾಗಿದೆ. ಶೇ. 80ರಷ್ಟು ಶಾಲಾ ಕಾಲೇಜು ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಅಲ್ಲದೆ ಪಠ್ಯಪುಸ್ತಕ, ಶೂ ಇತರೆ ವಿಳಂಬ, ಸೇರಿ ಇತರೆ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳ ಮೂಲಕ ಬಡ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿಲ್ಲ. ನಕಲಿ ಅಂಕಪಟ್ಟಿ ಹಾವಳಿ ನಿಂತಿಲ್ಲ. ಬಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಮೂಲಕ ಕೂಡಲೇ ವಿದ್ಯಾರ್ಥಿವೇತನ ತಕ್ಷಣ ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ಪಾಸ್ ವಿತರಿಸಬೇಕು. ಸರ್ಕಾರಿ ಶಾಲಾ, ಕಾಲೇಜಿಗಳಲ್ಲಿ ಶುಲ್ಕವನ್ನು ಕಡಿಮೆ ಮಾಡಬೇಕು, ಶಾಲಾ ಕಾಲೇಜುಗಳಿಗೆ ತೆರಳಲು ಸಕಾಲದಲ್ಲಿ ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸೇರಿ ಇನ್ನಿತರೆ ಬೇಡಿಕೆ ಈಡೇರಿಸಲು ಡಿ.17ರಂದು ಶನಿವಾರ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು. ಇದಕ್ಕೆ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಂಶುಪಾಲರು ಸಹಕರಿಸಬೇಕೆಂದು ಕೋರಿದರು

