
ಬೆಂಗಳೂರು: 7ನೇ ವೇತನ ಆಯೋಗ ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರ ಅಸಮಾಧಾನ ಹೊರಹಾಕಿದ್ದು, ಸಂಘದ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರೆ ನೀಡಿದೆ. ಮಾ.1 ರಿಂದ ಅನಿರ್ಧಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ. ಇಂದು ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಮೇಲಿನ ತೀರ್ಮಾನ ಕೈಗೊಳ್ಳಲಾಗಿದೆ.ರಾಜ್ಯ ಬಜೆಟ್ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

